60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಕೋವಿಡ್ ಬಗ್ಗೆ ಭಯ ಬೇಡ, ಎಚ್ಚರಿಕೆ ವಹಿಸಿ ಎಂದ ಸಚಿವ….!

Follow Us :

ಕೆಲವು ದಿನಗಳಿಂದ ನೆರೆಯ ಕೇರಳದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ವೇರಿಯೆಂಟ್ ನ JN1 ತಳಿ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಇದೀಗ ರಾಜ್ಯ ಸರ್ಕಾರ ಸಹ ಕೆಲವೊಂದು ನಿಯಾಮಾವಳಿಗಳನ್ನು ಜಾರಿ ಮಾಡಲಿದೆ. ರೂಪಾಂತರಿ ವೈರಸ್ ಬಗ್ಗೆ ಯಾರೂ ಆತಂಕ ಪಡುವಂತಹ ಅಗತ್ಯವಿಲ್ಲ. ಶೀಘ್ರದಲ್ಲೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುತ್ತದೆ ಎಂದು ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಕೋವಿಡ್ 19 ರೂಪಾಂತರಿಯ ಬಗ್ಗೆ ಮಾತನಾಡಿದ್ದಾರೆ. ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ನಡೆಸಿದ್ದೇವೆ. ಈ ಸಭೆಯಲ್ಲಿ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚೆ ಮಾಡಲಾಗಿದೆ. ಕೆಲವೊಂದು ಮಾರ್ಗಸೂಚಿಗಳನ್ನು ಸಹ ಪಡೆದಿದ್ದೇವೆ. ಅದರಂತೆ 60 ವರ್ಷ ಮೇಲ್ಪಟ್ಟವರು. ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಶೀತ, ಕಫ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ.

ಇನ್ನೂ ಕೋವಿಡ್ ಹರಡುವಿಕೆ ಹೆಚ್ಚಾದರೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ಸಿದ್ದವಾಗಿರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಗಡಿ ಜಿಲ್ಲೆಗಳಾದ ಮಂಗಳೂರು, ಕೊಡಗು, ಚಾಮರಾಜನಗರ ಭಾಗಗಳಲ್ಲಿ ಹೆಚ್ಚಿನ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಕೇರಳದಿಂದ ಬರುವವರ ಮೇಲೆ ಹೆಚ್ಚು ಕೋವಿಡ್ ಟೆಸ್ಟ್ ಮಾಡುವಂತೆ ಆದೇಶ ಮಾಡಿದ್ದೇವೆ. ಜೊತೆಗೆ ಉಸಿರಾಟ ತೊಂದರೆಯಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲಾಗುತ್ತದೆ. ಆಗ ಕೋವಿಡ್ ಹರಡುವಿಕೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಆಗ ಏನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸದ್ಯ ರಾಜ್ಯದಲ್ಲಿ ಸಹ ಸ್ಥಿತಿಯಿದ್ದು, ಹೆಚ್ಚು ಪಾಸಿಟೀವ್ ಪ್ರಕರಣಗಳು ಕಂಡು ಬಂದರೇ ನಿಷೇಧ ಹೇರುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಆದರೆ ಜನತೆ ಭಯಪಡುವಂತಹ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.